ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಹಲ್ಲಿಬಿದ್ದ ಹಾಲು ಕುಡಿದ ಪರಿಣಾಮ 38 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದಲ್ಲಿ ನಡೆದಿದೆ. ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಈ ಘಟನೆ ಸಂಭವಿಸಿದೆ.
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕನ್ನಡ, ಉರ್ದು ಮಾಧ್ಯಮ ಸೇರಿ 98 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಾಲೆಗೆ ಬರುವ ಕ್ಷೀರಭಾಗ್ಯ ಯೋಜನೆಯ ಹಾಲನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಆದರೆ, ಹಾಲಿನಲ್ಲಿ ಹಲ್ಲಿ ಬಿದ್ದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಅಷ್ಟರಲ್ಲಿ ವಿದ್ಯಾರ್ಥಿಗಳು ವಾಂತಿ ಮಾಡಿಕೊಳ್ಳಲು ಶುರು ಮಾಡಿದ್ದಾರೆ. ತಕ್ಷಣ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಾವ ಮಕ್ಕಳಿಗೆ ಅಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಹಾಲಿನಲ್ಲಿ ಹಲ್ಲಿ ಯಾವಾಗ, ಹೇಗೆ ಬಿದ್ದಿತು ಎನ್ನುವುದರ ಕುರಿತು ತನಿಖೆ ನಡೆಸಲಾಗುವುದು ಅಧಿಕಾರಿಗಳು ತಿಳಿಸಿದ್ದಾರೆ.