ನರೇಗಾ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ: ಜಿ.ಪಂ ಸಿಇಒ ರಿಷಿ ಆನಂದ್

82

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಗ್ರಾಮೀಣ ಪ್ರದೇಶದಲ್ಲಿನ ಜನರು ವಲಸೆ ಹೋಗುವುದನ್ನು ತಪ್ಪಿಸಲು ಹಮ್ಮಿಕೊಂಡ ಮಹತ್ವಾಕಾಂಕ್ಷಿ ಯೋಜನೆ ನರೇಗಾ. ಈಗ ನರೇಗಾ ಯೋಜನೆಯಡಿ ಕೆಲಸ ಮಾಡುವು ಕಾರ್ಮಿಕರಿಗೆ ದಿನಗೂಲಿಯ ಮೊತ್ತ 349ರೂ ಮಾಡಲಾಗಿದೆ. ಇದನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ರಿಶಿ ಆನಂದ ಕರೆ ನೀಡಿದ್ದಾರೆ.

ಏಪ್ರಿಲ್ 1, 2024 ರಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ದಿನಗೂಲಿ ಹಣ ರೂ.316 ರಿಂದ ರೂ.349ಗೆ ಹೆಚ್ಚಿಸಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರ ಕೆಲಸ ಒದಗಿಸಿ ವಲಸೆ ತಡೆಯುವ ಉದ್ದೇಶದಿಂದ “ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ/ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ” ಅಭಿಯಾನವನ್ನು ಮಾರ್ಚ್ 15ರಿಂದ ಮೇ 31,2024ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಜಿ.ಪಂ ಸಿಇಒ ರಿಶಿ ಆನಂದ

2023-24ನೇ ಸಾಲಿನಲ್ಲಿ ಮಳೆ ಕೊರತೆಯಿಂದ ವಿಜಯಪುರ ಜಿಲ್ಲೆಯ 13 ತಾಲೂಕುಗಳನ್ನೂ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಕೂಲಿಕಾರ್ಮಿಕರ, ರೈತರ ಕೃಷಿ ಚಟುವಟಿಕೆಗಳು ಕುಂಠಿತವಾಗಿರುವ ಕಾರಣದಿಂದ ಗ್ರಾಮೀಣ ಪ್ರದೇಶದಲ್ಲಿ ಅಕುಶಲ ಕೂಲಿಕಾರ್ಮಿಕರ ಜೀವನ ನಿರ್ವಹಣೆ ಕಷ್ಟ ಸಾಧ್ಯವಾಗಿರುತ್ತದೆ. ಇಂತಹ ಕುಟುಂಬಗಳಿಗೆ ಪ್ರತಿದಿನ ರೂ.349 ಕೂಲಿ ಜೊತೆಗೆ 100 ದಿನಗಳ ಕೆಲಸ ನೀಡಲಾಗುತ್ತದೆ.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಮುಂದಿನ 2024-25ನೇ ಸಾಲಿಗೆ ವಿಜಯಪುರ ಜಿಲ್ಲೆಗೆ 42 ಲಕ್ಷ ಮಾನವ ದಿನಗಳನ್ನು ಸೃಜಿಸಲು ಗುರಿ ಹೊಂದಲಾಗಿದೆ. ಗುರಿ ಹೊಂದಿದ ಮಾನವದಿನಗಳನ್ನು ಸೃಜಿಸಲು ಗ್ರಾಮ ಪಂಚಾಯತಿ ಕ್ರಿಯಾ ಯೋಜನೆಗಳನ್ನು ಈಗಾಗಲೇ ಅನುಮೋದಿಸಲಾಗಿದೆ. ಅನುಮೋದನೆಯಾದ ಕಾಮಗಾರಿಗಳಲ್ಲಿನ ಸಮುದಾಯ ಹಾಗೂ ಕೂಲಿ ಆಧಾರಿತ ಕಾಮಗಾರಿಗಳನ್ನು ಮಾತ್ರ ಆರ್ಥಿಕ ವರ್ಗದ ಏಪ್ರಿಲ್, ಮೇ ಮತ್ತು ಜೂನ್ ಮಾಹೆಗಳಲ್ಲಿ  ಅನುಷ್ಠಾನಗೊಳಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!