ಮಳೆ ಹಾನಿ ಕುರಿತು ಶಾಸಕ ಅಮೃತ ದೇಸಾಯಿ ವಿಶೇಷ ಸಭೆ

163

ಪ್ರಜಾಸ್ತ್ರ ಸುದ್ದಿ

ಧಾರವಾಡ: ತಾಲೂಕಿನಾದ್ಯಂತ ಇತ್ತೀಚಿನ ದಿನಗಳಲ್ಲಿ ಸುರಿದ ಸತತ ಮಳೆಯಿಂದ ಸೋಯಾಬಿನ್, ಹೆಸರು ಸೇರಿದಂತೆ ಇತರೆ ಬೆಳೆಗಳಿಗೆ ಹಾನಿಯಾಗಿದೆ.‌ ಅಧಿಕಾರಿಗಳು ಕೂಡಲೇ ಬೆಳೆಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಶಾಸಕ ಅಮೃತ ದೇಸಾಯಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ಶುಕ್ರವಾರ ನಡೆದ ಮಳೆಯಿಂದ ಉಂಟಾದ ಬೆಳೆಹಾನಿ ಕುರಿತಾದ ಅಧಿಕಾರಿಗಳ ವಿಶೇಷ ಸಭೆಯ ಅಧ್ಯಕ್ಷೆತೆ ವಹಿಸಿ ಅವರು ಮಾತನಾಡಿದರು. ತೀವ್ರ ಮಳೆಯಿಂದಾಗಿ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ ತಾಲೂಕಿನ‌ ರೈತರ ಹೊಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಹ ಬಹಳಷ್ಟು ಹಾಳಾಗಿವೆ. ಅವುಗಳನ್ನು ಕೂಡಲೇ ಪರಿಶೀಲಿಸಿ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು

ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆಗೆ ಸೂಚನೆ:

ಧಾರವಾಡ ತಾಲೂಕಿನಾದ್ಯಂತ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಅದರಲ್ಲೂ ವಿಶೇಷವಾಗಿ ಮಾರಡಗಿ, ಹೆಬ್ಬಳ್ಳಿ, ಚಂದನಮಟ್ಟಿ ಗ್ರಾಮದಲ್ಲಿ ಹೆಚ್ಚು ಕಾಣಿಸಿಕೊಂಡಿದೆ.‌ ರೈತರ ಜೀವಾಳು ಆಗಿರುವ ಜಾನುವಾರಗಳನ್ನು ತುರ್ತುಕ್ರಮವಹಿಸಿ ರಕ್ಷಣೆ ಮಾಡಬೇಕಿದೆ. ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಎಲ್ಲ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಲಸಿಕೆ ನೀಡುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಂಚಾಯಾತ್ ರಾಜ್ಯ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್, ಧಾರವಾಡ ತಹಸೀಲ್ದಾರ್ ಸಂತೋಷ ಹಿರೇಮಠ, ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಉಮೇಶ ಕೊಂಡಿ ಹಾಗೂ ಇತರರು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!