LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಗ್ನಿವೀರ ನೇಮಕಾತಿ ರ‍್ಯಾಲಿ: ಪೂರ್ವಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಭಾರತೀಯ ಸೇನೆಯ ಅಗ್ನಿವೀರ ನೇಮಕಾತಿ ರ‍್ಯಾಲಿಯು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 10 ರಿಂದ 23ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಅವರು ಸೋಮವಾರ ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣಕ್ಕೆ ಭೇಟಿ ನೀಡಿ ನೇಮಕಾತಿ ರ‍್ಯಾಲಿಗೆ ಕೈಗೊಳ್ಳಲಾಗಿರುವ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

ನೇಮಕಾತಿ ರ‍್ಯಾಲಿಗೆ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಆಗಮಿಸುವ ನಿರೀಕ್ಷೆಯಿದ್ದು, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಅಥವಾ ಅನಾನುಕೂಲವಾಗದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು. ನೇಮಕಾತಿ ಪ್ರಕ್ರಿಯೆ ನಡೆಯುವ ಅವಧಿಯಲ್ಲಿ ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್, ಬೆಳಕು, ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ದೃಷ್ಟಿಯಿಂದ ಅಗತ್ಯ ವೈದ್ಯಕೀಯ ವ್ಯವಸ್ಥೆ ಕಲ್ಪಿಸಬೇಕು. ಚಿಕಿತ್ಸೆ ಒದಗಿಸಲು ಕ್ರೀಡಾಂಗಣದಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ಆಂಬುಲೆನ್ಸ್ ಸೌಲಭ್ಯವನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಅಗತ್ಯ ವಸತಿ, ಊಟ ಮತ್ತು ಇತರೆ   ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಅಭ್ಯರ್ಥಿಗಳು ನಿಗದಿತ ಸಮಯದಲ್ಲಿ ನೇಮಕಾತಿ ಸ್ಥಳಕ್ಕೆ ತಲುಪಲು ಅನುಕೂಲವಾಗುವಂತೆ ಅಗತ್ಯ ಮಾಹಿತಿ, ಮಾರ್ಗದರ್ಶನ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ಸ್ಪಷ್ಟ ಮಾಹಿತಿ ದೊರೆಯುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಅಭ್ಯರ್ಥಿಗಳ ಶೈಕ್ಷಣಿಕ ಹಾಗೂ ಇತರೆ ಅಗತ್ಯ ದಾಖಲೆಗಳ ಪರಿಶೀಲನೆ ನೇಮಕಾತಿ ಪ್ರಕ್ರಿಯೆಯ ಪ್ರಮುಖ ಹಂತವಾಗಿರುವುದರಿಂದ ಶಿಕ್ಷಣ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ದಾಖಲೆ ಪರಿಶೀಲನೆ ವೇಳೆ ಯಾವುದೇ ಗೊಂದಲ ಉಂಟಾಗದAತೆ ಸಿಬ್ಬಂದಿಯನ್ನು ನಿಯೋಜಿಸಿ, ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಪ್ರಕ್ರಿಯೆಯನ್ನು ತ್ವರಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕು ಸೂಚನೆ ನೀಡಿದರು. ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ, ಅಭ್ಯರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಅಗ್ನಿವೀರ ನೇಮಕಾತಿಗೆ ಅಭ್ಯರ್ಥಿಗಳೊಂದಿಗೆ ಅವರ ಪಾಲಕರು ಹಾಗೂ ಸಾರ್ವಜನಿಕರು ಆಗಮಿಸುವ ಸಾಧ್ಯತೆ ಇರುವುದರಿಂದ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ದಟ್ಟಣೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ವಿಶೇಷ ಕ್ರಮ ಕೈಗೊಳ್ಳಬೇಕು  ಪೊಲೀಸ್ ಇಲಾಖೆಗೆ ಸೂಚಿಸಿದರು. ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಸಂಬಂಧಿಸಿದ ಇಲಾಖೆಗಳು ಸನ್ನದ್ಧವಾಗಿರುವಂತೆ ತಿಳಿಸಿದರು. ನೆಮಕಾತಿ ರ‍್ಯಾಲಿಯು ಜಿಲ್ಲೆಯ ಪ್ರತಿಷ್ಠಿತ ಕಾರ್ಯಕ್ರಮವಾಗಿದ್ದು, ಭಾರತೀಯ ಸೇನೆಗೆ ಸೇರ್ಪಡೆಯಾಗಲು ಯುವಜನರಿಗೆ ದೊರೆಯುವ ಮಹತ್ವದ ಅವಕಾಶವಾಗಿದೆ. ಆದ್ದರಿಂದ ನೇಮಕಾತಿ ಪ್ರಕ್ರಿಯೆಯು ಯಾವುದೇ ಅಡೆತಡೆಯಿಲ್ಲದೆ, ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಯುವಂತೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು.

ಈ ಸಂದರ್ಭದಲ್ಲಿ ಮಂಗಳೂರಿನ ಆರ್ಮಿ ರಿಕ್ರೂಟ್‌ಮೆಂಟ್ ಕಚೇರಿಯ ನಿರ್ದೇಶಕ ಕರ್ನಲ್ ಜಿ. ಸೋಮು ಮಹಾರಾಜನ್, ಅಭಿಜಿತ್ ಸಿಂಗ್, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕ ವಿನಯಕುಮಾರ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸೇನಾ ನೇಮಕಾತಿ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST