ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ನೀಡುವಾಗ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಮಾತ್ರ ಆದ್ಯತೆ ನೀಡದೆ, ವಿಮೆ ಕಟ್ಟಲು ಸಾಧ್ಯವಾಗದ ರೈತರಿಗೂ ಸರ್ಕಾರ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ತಾಲೂಕಾಧ್ಯಕ್ಷ ಬಸವರಾಜ ರಂಜುಣಗಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಹುತೇಕ ಸಣ್ಣ ಹಾಗೂ ಅತಿಸಣ್ಣ ರೈತರು ಆರ್ಥಿಕ ಸಂಕಷ್ಟದಿಂದಾಗಿ ಬೆಳೆ ವಿಮೆ ಪಾವತಿಸಲು ಸಾಧ್ಯವಾಗುವುದಿಲ್ಲ. ಆದರೆ ಪ್ರಕೃತಿ ವಿಕೋಪದಿಂದ ಬೆಳೆ ಹಾನಿಗೊಳಗಾದ ಇಂತಹ ರೈತರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ವಿಮೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಅವರನ್ನು ಪರಿಹಾರದಿಂದ ವಂಚಿಸುವುದು ಸರಿಯಲ್ಲ. ಬೆಳೆ ಹಾನಿಗೊಳಗಾದ ಪ್ರತಿಯೊಬ್ಬ ರೈತನನ್ನೂ ಸಮರ್ಪಕವಾಗಿ ಸಮೀಕ್ಷೆಗೊಳಪಡಿಸಿ, ವಿಮೆ ಮಾಡಿಸಿದ್ದಾರೆಯೇ ಇಲ್ಲವೇ ಎಂಬ ಭೇದವಿಲ್ಲದೆ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸರ್ಕಾರ ಕೂಡಲೇ ಬೆಳೆ ಹಾನಿ ಸಮೀಕ್ಷೆಯನ್ನು ಸಮರ್ಪಕವಾಗಿ ನಡೆಸಿ, ವಿಮೆ ಕಟ್ಟಲಾಗದ ರೈತರಿಗೂ ಪರಿಹಾರ ಕಲ್ಪಿಸಲು ವಿಶೇಷ ಕ್ರಮ ಕೈಗೊಳ್ಳಬೇಕು. ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ತಕ್ಷಣ ಧಾವಿಸಿ ನ್ಯಾಯಯುತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.



