ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, ನಮ್ಮ ಕನ್ನಡಿಗರ ಪ್ರತಿಭೆ, ಕೌಶಲ್ಯ ಮತ್ತು ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ.
ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕನ್ನಡಿಗರ ಹಿತಾಸಕ್ತಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದಿದ್ದಾರೆ.


