ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದಲ್ಲಿ ಈಗಾಗ್ಲೇ ಬಹುತೇಕ ಕಡೆ ಬರಗಾಲ ಬಿದ್ದಿದೆ. ಇದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಮುಂದಿನ ಒಂದು ವಾರ ಒಣ ಹವೆ ಮುಂದುವರೆಯಲಿದ್ದು, ತಾಪಮಾನ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 1 ರಿಂದ ಇಲ್ಲಿಯ ತನಕ 74.2 ಸೆಂ.ಮೀ ವಾಡಿಕೆ ಮಳೆಯಾಗಬೇಕಿತ್ತು. 48.7 ಸೆಂ.ಮೀ ಮಳೆಯಾಗಿದೆ. ಶೇ.34ರಷ್ಟು ಮಳೆ ಕೊರತೆಯಾಗಿದೆ. ಸೆಪ್ಟೆಂಬರ್ ತಿಂಗಳ ಮೊದಲ 11 ದಿನ 5.1 ಸೆಂ.ಮೀ ಮಳೆಯಾಗಬೇಕಿತ್ತು. ಕೇವಲ 1 ಸೆಂ.ಮೀ ಮಳೆಯಾಗಿದೆ. ಇದರಿಂದಾಗಿ ಶೇ 81ರಷ್ಟು ಮಳೆ ಕೊರತೆಯಾಗಿದೆ. ಹೀಗಾಗಿ ತಾಪಮಾನ ಏರಿಕೆಯಾಗಿದ್ದು, ಬೇಸಿಗೆ ಕಾಲದ ವಾತಾವರಣ ನಿರ್ಮಾಣವಾಗಿದೆ.
ವಿಜಯಪುರ, ಬಾಗಲಕೋಟೆ, ಗದಗ, ರಾಯಚೂರು ಸೇರಿ ಹಲವು ಜಿಲ್ಲೆಗಳಲ್ಲಿ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ಬೆಂಗಳೂರಿನಲ್ಲಿ ತಾಪಮಾನ ಏರಿಕೆಯಾಗಿದ್ದು, 33 ಡಿಗ್ರಿ ಸೆಲ್ಸಿಯಸ್ ಆಗಿದೆ. ಒಟ್ಟಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿ ಹೆಚ್ಚಾಗಿದೆ. ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


