ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಸಿಂದಗಿ ಮತ್ತು ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಿಸದೆ ರಾಜ್ಯ ಸರ್ಕಾರ ಅವಳಿ ತಾಲೂಕುಗಳ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ತಾಲೂಕಿನ ಹಲವು ಭಾಗಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದಿದ್ದಾರೆ.
ಬೆಳೆಗಳಿಗೆ ಅಗತ್ಯ ಪ್ರಮಾಣದ ಮಳೆಯಾಗದೆ ಕೃಷಿ ಉತ್ಪಾದನೆ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ರೈತರಿಗೆ ಬರ ಪರಿಹಾರ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳ ಅಗತ್ಯವಿದೆ. ಬರಗಾಲದ ಪರಿಸ್ಥಿತಿ ಇದ್ದರೂ ಸಿಂದಗಿ ಮತ್ತು ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿರುವುದು ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಸರ್ಕಾರದ ಈ ನಡೆಯಿಂದ ಅವಳಿ ತಾಲೂಕಿನ ಸಾವಿರಾರು ರೈತರಿಗೆ ಪರಿಹಾರ ಹಾಗೂ ಅಗತ್ಯ ಸೌಲಭ್ಯಗಳಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಆರೋಪಿಸಿದ್ದಾರೆ.
ತಕ್ಷಣವೇ ಸಿಂದಗಿ ಹಾಗೂ ಆಲಮೇಲ ತಾಲೂಕುಗಳಲ್ಲಿ ಸಮಗ್ರ ಬೆಳೆ ಸಮೀಕ್ಷೆ ನಡೆಸಿ, ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ರೈತರ ಹಿತದೃಷ್ಟಿಯಿಂದ ಅವಳಿ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಿಸಿ, ಅರ್ಹ ರೈತರಿಗೆ ಬೆಳೆ ಪರಿಹಾರ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು. ರೈತರ ಸಂಕಷ್ಟವನ್ನು ಸರ್ಕಾರ ರಾಜಕೀಯ ಕಾರಣಗಳಿಂದ ಕಡೆಗಣಿಸಬಾರದು. ವಾಸ್ತವ ಪರಿಸ್ಥಿತಿಯನ್ನು ಆಧರಿಸಿ ತಕ್ಷಣ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.



